logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಮಾವು ಬೆಳೆಗಾರರಿಗೆ ಸಿಹಿ ಸುದ್ದಿ: ಕೆಜಿಗೆ ₹2 ನೆರವು ನೀಡಲು ಕೇಂದ್ರ-ರಾಜ್ಯ ಒಪ್ಪಿಗೆ!

ಬೆಂಗಳೂರು: ನಿರಂತರ ಬೆಲೆ ಕುಸಿತದಿಂದ ಕಂಗಾಲಾಗಿದ್ದ ರಾಜ್ಯದ ಮಾವು ಬೆಳೆಗಾರರಿಗೆ ಸರ್ಕಾರ ನೆರವಿನ ಹಸ್ತ ಚಾಚಿದೆ. ಮಾರುಕಟ್ಟೆಯಲ್ಲಿ ಮಾವಿನ ಬೆಲೆ ಕುಸಿದಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ಮನವಿಯ ಮೇರೆಗೆ ಕೇಂದ್ರ ಸರ್ಕಾರವು ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (Market Intervention Scheme) ಅಡಿ ನೆರವು ನೀಡಲು ಸಕಾರಾತ್ಮಕವಾಗಿ ಸ್ಪಂದಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತಿ ಕೆ.ಜಿ. ಮಾವಿಗೆ ತಲಾ ₹2 ರಂತೆ, ಒಟ್ಟು ₹4 ನೆರವು ನೀಡಲು ನಿರ್ಧರಿಸಿವೆ.
ಇಂದು (ಸೋಮವಾರ) ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ವೀಡಿಯೊ ಸಂವಾದ ನಡೆಸಿ, ಮಾವು ಬೆಳೆಗಾರರ ಸಂಕಷ್ಟವನ್ನು ಮನವರಿಕೆ ಮಾಡಿಕೊಟ್ಟರು.
2025-26ನೇ ಸಾಲಿನ ಮಾರುಕಟ್ಟೆ ಋತುವಿನಲ್ಲಿ PDPS (Price Deficiency Payment Scheme) ಯೋಜನೆಯನ್ನು ಮಾವಿಗೆ ಅನ್ವಯಿಸುವಂತೆ ಸಚಿವ ಚಲುವರಾಯಸ್ವಾಮಿ ಮಾಡಿದ ಮನವಿಗೆ ಕೇಂದ್ರ ಕೃಷಿ ಸಚಿವರು ಒಪ್ಪಿಗೆ ನೀಡಿದ್ದಾರೆ. ಇದರಡಿಯಲ್ಲಿ, 2.5 ಲಕ್ಷ ಮೆಟ್ರಿಕ್ ಟನ್ ಮಾವಿನ ಹಣ್ಣನ್ನು ಖರೀದಿಸಲು ಕೇಂದ್ರ ಸರ್ಕಾರ ಸಮ್ಮತಿಸಿದೆ. ಈ ಸಂಬಂಧ ಅಧಿಕೃತ ಆದೇಶ ಸೋಮವಾರ ಹೊರಬೀಳುವ ನಿರೀಕ್ಷೆಯಿದೆ.
ಸಂವಾದದ ವೇಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು

ರೈತರ ಸಂಕಷ್ಟಕ್ಕೆ ಸ್ಪಂದನೆ
ಕರ್ನಾಟಕವು ಮಾವು ಉತ್ಪಾದನೆಯಲ್ಲಿ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ. 2025-26ನೇ ಸಾಲಿನಲ್ಲಿ 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗಿದ್ದು, ಅಂದಾಜು 8 ರಿಂದ 10 ಲಕ್ಷ ಟನ್ ಉತ್ಪಾದನೆಯಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ರಾಜ್ಯದ ಪ್ರಮುಖ ಮಾವು ಬೆಳೆ ಪ್ರದೇಶಗಳಾಗಿವೆ.

ಮೇ ನಿಂದ ಜುಲೈವರೆಗೆ ನಡೆಯುವ ಮಾವು ಕೊಯ್ಲು ಅವಧಿಯಲ್ಲಿ ಮಾರುಕಟ್ಟೆ ಬೆಲೆಯಲ್ಲಿ ತೀವ್ರ ಏರಿಳಿತಗಳು ಕಂಡುಬಂದಿವೆ. ಮೇ 2025ರಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರದಂತಹ ಪ್ರಮುಖ ಮಾರುಕಟ್ಟೆಗಳಲ್ಲಿ ಮಾವಿನ ಬೆಲೆ ಪ್ರತಿ ಕ್ವಿಂಟಾಲ್‌ಗೆ ₹1,200 ರಿಂದ ₹2,500 ಇತ್ತು. ಆದರೆ, ಶ್ರೀನಿವಾಸಪುರ ಮಾರುಕಟ್ಟೆಯಲ್ಲಿ ತೋತಾಪುರಿ ಮಾವಿನ ಬೆಲೆ ಪ್ರತಿ ಕ್ವಿಂಟಾಲ್‌ಗೆ ₹450-₹550ಕ್ಕೆ ಕುಸಿದಿತ್ತು, ಇದು ರೈತರನ್ನು ತೀವ್ರ ಸಂಕಷ್ಟಕ್ಕೆ ದೂಡಿತ್ತು.

ಕರ್ನಾಟಕ ಕೃಷಿ ಬೆಲೆ ಆಯೋಗವು ಮಾವಿನ A1 + FL ಕೃಷಿ ವೆಚ್ಚವನ್ನು ಪ್ರತಿ ಕ್ವಿಂಟಾಲ್‌ಗೆ ₹3,460 ಹಾಗೂ C-3 ವೆಚ್ಚವನ್ನು ₹5,466 ಎಂದು ಶಿಫಾರಸು ಮಾಡಿತ್ತು.

ಈ ಹಿನ್ನೆಲೆಯಲ್ಲಿ, ಜೂನ್ 11, 2025 ರಂದು ಭಾರತ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು ಮತ್ತು ಜೂನ್ 13, 2025 ರಂದು ಸ್ಪಷ್ಟೀಕರಣಗಳಿಗೆ ಉತ್ತರ ನೀಡಲಾಯಿತು. ತೋಟಗಾರಿಕೆ ಇಲಾಖೆಯಡಿ ಕಾರ್ಯನಿರ್ವಹಿಸುವ ಕರ್ನಾಟಕ ಮಾವು ಅಭಿವೃದ್ಧಿ ಮಂಡಳಿಯನ್ನು PDPS ಅನುಷ್ಠಾನಕ್ಕಾಗಿ ರಾಜ್ಯ ಮಟ್ಟದ ನೋಡಲ್ ಸಂಸ್ಥೆಯಾಗಿ ಗುರುತಿಸಲಾಗಿದೆ.

ಸರ್ಕಾರದ ಈ ನಿರ್ಧಾರದಿಂದ ಮಾವು ಬೆಳೆಗಾರರಿಗೆ ದೊಡ್ಡ ಆರ್ಥಿಕ ನೆಮ್ಮದಿ ಸಿಗುವ ನಿರೀಕ್ಷೆಯಿದೆ.

134
2091 views

Comment